ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
Views: 4
ಕನ್ನಡ ಕರಾವಳಿ ಸುದ್ದಿ: ಕೋಟ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಮಾನ್ಯ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇವರ ಆಪ್ತ ಸಹಾಯಕರಾದ ಶ್ರೀ ಹರೀಶ್ ಶೆಟ್ಟಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿ ಅವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅಮೂಲ್ಯವಾದ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವೃತ್ತಿಯನ್ನು ಆಯ್ಕೆ ಮಾಡಿಕೊಂಡು, ಸ್ಪಷ್ಟ ಗುರಿ, ನಿರಂತರ ಪರಿಶ್ರಮ ಮತ್ತು ಶಿಸ್ತಿನ ಮೂಲಕ ಯಶಸ್ಸು ಸಾಧಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕೆ. ಜಗದೀಶ ನಾವಡ ಅವರು ವಹಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಕೋಟ ವಿದ್ಯಾಸಂಘದ ಅಧ್ಯಕ್ಷರಾದ ಶ್ರೀ ಭಾಸ್ಕರ್ ಹಂದೆ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಹರೀಶ್ ಶೆಟ್ಟಿಯವರು ಕೂಡ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಥಮ ಡಿಚಿಟಿಞ ನೊಂದಿಗೆ ತೇರ್ಗಡೆ ಹೊಂದಿದ್ದರು. ಈ ನಿಟ್ಟಿನಲ್ಲಿ ಅವರ ಮಾರ್ಗದರ್ಶನ ಬಹಳ ಉಪಯುಕ್ತವಾಗಿತ್ತು. ಮುಂದಿನ ದಿನಗಳಲ್ಲಿ ಕೂಡ ವಿದ್ಯಾರ್ಥಿಗಳಿಗೆ ಇನ್ನಷ್ಟು ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಭರವಸೆ ನೀಡಿದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ಕಾರ್ಯಕ್ರಮವನ್ನು ನಿರೂಪಿಸಿದಳು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಜಯಶ್ರೀ ಅವರು ವಂದನಾರ್ಪಣೆ ಸಲ್ಲಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಸಂಜೀವ ಅವರು ಕಾರ್ಯಕ್ರಮವನ್ನು ಸಂಘಟಿಸಿದರು.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸಿ, ಭವಿಷ್ಯದ ವೃತ್ತಿ ಆಯ್ಕೆಗಳಿಗೆ ಸೂಕ್ತ ದಿಕ್ಕು ತೋರಿಸಿದ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.






