ಮದುವೆ ನಿರಾಕರಿಸಿದ ವ್ಯಕ್ತಿಗೆ ಬೆದರಿಕೆ ಹಾಕಿ ರೂ.42.97 ಲಕ್ಷ ವಸೂಲಿ ಆರೋಪ :ಬೈಂದೂರಿನ ಭಾಷಾ ಶಿಕ್ಷಕಿ ಸೇರಿ ಇಬ್ಬರು ಅರೆಸ್ಟ್!
Views: 100
ಕನ್ನಡ ಕರಾವಳಿ ಸುದ್ದಿ: ಮದುವೆ ಪ್ರಸ್ತಾಪವನ್ನು ನಿರಾಕರಿಸಿದ ವ್ಯಕ್ತಿಗೆ ಬೆದರಿಕೆ ಹಾಕಿ, ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಸುಮಾರು ರೂ.42.97 ಲಕ್ಷ ಹಣ ವರ್ಗಾಯಿಸಿಕೊಂಡು ವಂಚಿಸಿದ ಆರೋಪದಡಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಉಡುಪಿಯ ನಿರ್ಮಾಣ್ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿರುವ ಪ್ರದೀಪ್ ಕೆ. ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ದೂರಿನ ಪ್ರಕಾರ, 2023ರ ಕೊನೆಯ ತಿಂಗಳು ಅಥವಾ 2024ರ ಜನವರಿಯಲ್ಲಿ ಕನ್ನಡ ಜೋಡಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಬೆಂಗಳೂರಿನ ಬಸವೇಶ್ವರ ನಗರದ ಎಸ್. ಕಡಂಬಿ ವಿದ್ಯಾಕೇಂದ್ರದಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ, ಮೂಲತಃ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಡಬೆಟ್ಟು ಹೆಣ್ಬೇರು ನಿವಾಸಿ ನಾಗರತ್ನ ಎಚ್. (42) ಎಂಬವರ ಪರಿಚಯವಾಗಿತ್ತು. ನಾಗರತ್ನ ಅವರು ವಿವಾಹದ ಪ್ರಸ್ತಾಪ ಮುಂದಿಟ್ಟಿದ್ದು, ಜಾತಿಯೊಳಗಿನ ಯುವತಿಯನ್ನು ಮದುವೆಯಾಗುವುದಾಗಿ ತಿಳಿಸಿ ಪ್ರದೀಪ್ ಅದನ್ನು ನಿರಾಕರಿಸಿದ್ದರು ಎನ್ನಲಾಗಿದೆ.
ಬಳಿಕ ನಾಗರತ್ನ ಅವರು ಫೋನ್ ಕರೆ ಮತ್ತು ಸಂದೇಶಗಳ ಮೂಲಕ ಸಂಪರ್ಕದಲ್ಲಿದ್ದು, ತಮ್ಮ ಕಷ್ಟಗಳನ್ನು ಹೇಳಿಕೊಂಡು ಹಂತ ಹಂತವಾಗಿ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜನವರಿ 2024ರಿಂದ ಜನವರಿ 2026ರ ಅವಧಿಯಲ್ಲಿ ನಾಗರತ್ನ ಅವರ ಖಾತೆ ಸೇರಿದಂತೆ, ಅವರ ಸಹೋದ್ಯೋಗಿ ಹೇಮಂತ್ ಕರ್ಕೇರಾ, ಚಿಕ್ಕಮ್ಮನ ಮಗ ಪ್ರಮೋದ್ ಹಾಗೂ ಅಕ್ಕ ರೇಣುಕಾ ಅವರ ಬ್ಯಾಂಕ್ ಖಾತೆಗಳಿಗೆ ಒಟ್ಟು ₹42,97,350 ಹಣವನ್ನು ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.
ಹಣವನ್ನು ವಾಪಸ್ ಕೇಳಿದಾಗ, ತಮ್ಮಿಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಸುಳ್ಳು ಪ್ರಕರಣ ದಾಖಲಿಸುವುದಾಗಿ ಹಾಗೂ ಪ್ರದೀಪ್ ಕೆಲಸ ಮಾಡುವ ಕಚೇರಿಗೆ ಬಂದು ಸಿಬ್ಬಂದಿ ಮತ್ತು ಗ್ರಾಹಕರ ಎದುರು ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸಂಸ್ಥೆಯ ಹಣ ದುರುಪಯೋಗಪಡಿಸಿಕೊಂಡಿರುವುದಾಗಿ ಆರೋಪಿಸಿ ಸುಳ್ಳು ಪತ್ರ ಬರೆದು, ಸಂಸ್ಥೆಯ ಮುಂದೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 61(2), 316(2), 318(2), 308(2), 308(6) ಸಹಿತ 3(5)ರಂತೆ ಪ್ರಕರಣ ದಾಖಲಾಗಿದೆ.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ನಗರ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಭರತೇಶ್ ಕಂಕಣವಾಡಿ ಮತ್ತು ರತ್ನಾಕರ ಕೆ. ಸೇರಿದಂತೆ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.
ಈ ತಂಡವು ಅಕ್ಟೋಬರ್ 26ರಂದು ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಬಸವೇಶ್ವರ ನಗರದಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಗಳಾದ ನಾಗರತ್ನ ಎಚ್. (42) ಮತ್ತು ಹೇಮಂತ್ ಕರ್ಕೇರಾ (41) ಅವರನ್ನು ವಶಕ್ಕೆ ಪಡೆದು, ಬಳಿಕ ದಸ್ತಗಿರಿ ಮಾಡಿದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.






