ಗೋಕರ್ಣ ಬೀಚ್ನಲ್ಲಿ ಭೀಕರ ದುರಂತ: ಪ್ರವಾಸಕ್ಕೆ ಬಂದಿದ್ದ ಮೂವರು ಐಟಿ ಉದ್ಯೋಗಿಗಳು ನೀರು ಪಾಲು
Views: 98
ಕನ್ನಡ ಕರಾವಳಿ ಸುದ್ದಿ: ವಾರಾಂತ್ಯದ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿಗಳ ತಂಡಕ್ಕೆ ಭೀಕರ ದುರಂತ ಎದುರಾಗಿದೆ. ದುಬ್ಬಣಶಶಿ ಕಡಲತೀರದಲ್ಲಿ ಆಟವಾಡಲು ಸಮುದ್ರಕ್ಕಿಳಿದಿದ್ದ ಐವರು ಭಾರಿ ಅಲೆಗೆ ಸಿಲುಕಿ ಕೊಚ್ಚಿಹೋಗಿದ್ದಾರೆ. ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನ ಅಲೋರಿಯಾ ಇಕೋಸ್ಪೇಸ್ ಕಂಪನಿಯ 16 ಉದ್ಯೋಗಿಗಳ ತಂಡ ಪ್ರವಾಸಕ್ಕಾಗಿ ಗೋಕರ್ಣಕ್ಕೆ ಆಗಮಿಸಿತ್ತು.
ತಂಡವು ದುಬ್ಬಣಶಶಿ ಬೀಚ್ನಲ್ಲಿರುವ ಕೋಜೆ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿತ್ತು. ಈ ವೇಳೆ ಕೆಲವರು ಸಮುದ್ರದಲ್ಲಿ ಆಟವಾಡಲು ನೀರಿಗಿಳಿದಿದ್ದರು. ಏಕಾಏಕಿ ಅಪ್ಪಳಿಸಿದ ಭಾರಿ ಅಲೆಗೆ ಐವರು ಸಿಲುಕಿ ಕೊಚ್ಚಿಹೋಗಿದ್ದಾರೆ. ತಕ್ಷಣ ಕಾರ್ಯಾಚರಣೆಗಿಳಿದ ರೆಸಾರ್ಟ್ನ ಜೀವರಕ್ಷಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನಾಲ್ವರನ್ನು ದಡಕ್ಕೆ ಕರೆತಂದಿದ್ದರು.
ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಜಾರ್ಖಂಡ್ ಮೂಲದ 22 ವರ್ಷದ ಶೋಭಾ ದಾಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ತಂಡದ ನಾಯಕ ಮಹಮ್ಮದ್ ಅಕ್ರಮ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನ ಕಲ್ಯಾಣನಗರದ 24 ವರ್ಷದ ವಿಶ್ವ ಸಮುದ್ರದಲ್ಲಿ ನಾಪತ್ತೆಯಾಗಿದ್ದರು. ಇದೀಗ ಶೋಧ ಕಾರ್ಯಾಚರಣೆ ವೇಳೆ ಅವರ ಮೃತದೇಹವೂ ಪತ್ತೆಯಾಗಿದೆ. ನಿಶಾಂತ್ ಮತ್ತು ಮಹಮ್ಮದ್ ಖಾಸಿಂ ಅವರನ್ನು ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಗೋಕರ್ಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಕಾರವಾರ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.






