ಶಿಕ್ಷಣ

ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ‘ಕನ್ನಡ ಸಿರಿ ನುಡಿ ಸಂಭ್ರಮ’ ಕನ್ನಡದ ಉಳಿವು-ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರ ಮಹತ್ವದ್ದು – ಡಾ. ರಮೇಶ್ ಶೆಟ್ಟಿ

Views: 11

ಕನ್ನಡ ಕರಾವಳಿ ಸುದ್ದಿ: ಕನ್ನಡ ನಾಡು, ನುಡಿ, ಸಾಹಿತ್ಯ ಹಾಗೂ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಇಲ್ಲಿನ ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಿರಿನುಡಿ ಸಂಭ್ರಮ’ ಕಾರ್ಯಕ್ರಮವು ಅತ್ಯಂತ ಸಂಭ್ರಮ-ಸಂಭ್ರಮದಿಂದ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. “ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡವನ್ನು ಕೇವಲ ಒಂದು ಭಾಷೆಯಾಗಿ ಕಲಿಯದೆ, ಪ್ರೀತಿಸಿ, ಗೌರವಿಸಿ, ದೈನಂದಿನ ಬದುಕಿನಲ್ಲಿ ಹೆಮ್ಮೆಯಿಂದ ಬಳಸಬೇಕು” ಎಂದು ಕರೆ ನೀಡಿದರು.

ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, “ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವರ್ಷವಿಡೀ ಭಾಷೆಯ ಬೆಳವಣಿಗೆ ಹಾಗೂ ಪ್ರಚಾರಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ ಮಾತನಾಡಿ, “ನಮ್ಮ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ. ಮುಂದಿನ ಪೀಳಿಗೆಗೂ ಕನ್ನಡದ ಮಹತ್ವವನ್ನು ತಲುಪಿಸುವ ಕೆಲಸವಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸೌರಭ:

ಕಾರ್ಯಕ್ರಮದ ಭಾಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿಯ ಅಭಿಮಾನವನ್ನು ಬಿಂಬಿಸುವ ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರಸ್ತುತಿಗಳು ಜರುಗಿದವು. ಕನ್ನಡದ ಸೊಗಡು ಮತ್ತು ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಸಭಿಕರ ಮೆಚ್ಚುಗೆ ಪಾತ್ರವಾಯಿತು.

ಕಾಲೇಜಿನ ಕನ್ನಡ ಉಪನ್ಯಾಸಕಿ ನೈನಾ ಜೆ.ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಪ್ರಗತಿ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳಾದ ನಿಖಿತಾ, ಗಾಯತ್ರಿ, ಮುಝಮ್ಮಿಲ್, ಸುಪ್ರೀತ್ ಹಾಗೂ ಆದಿತ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Back to top button
error: Content is protected !!