ರಾಜಕೀಯ

ದಿಢೀರ್ ದೆಹಲಿಗೆ ತೆರಳಿದ ಬಿ.ವೈ.ವಿಜಯೇಂದ್ರ..ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ!

Views: 13

ಕನ್ನಡ ಕರಾವಳಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪಕ್ಷದ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದಿಢೀರ್ ದಿಲ್ಲಿಗೆ ಪ್ರಯಾಣ ಬೆಳೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.

ದಿಲ್ಲಿಗೆ ತೆರಳಿರುವ ವಿಜಯೇಂದ್ರ ಅವರು ಪಕ್ಷದ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ, ಹೈಕಮಾಂಡ್ ನಾಯಕರ ಭೇಟಿಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ ಅವರ ದಿಲ್ಲಿ ಭೇಟಿಯ ಉದ್ದೇಶವೇನು ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಆರಂಭವಾಗಿದೆ. ವಿಜಯೇಂದ್ರ 2023ರ ನವೆಂಬರ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ನ.10ಕ್ಕೆ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡಿದೆ.

ವಿಜಯೇಂದ್ರ ಅವರನ್ನು ಮುಂದುವರಿಸಬೇಕೇ ಅಥವಾ ಹೊಸ ನಾಯಕನಿಗೆ ಅವಕಾಶ ನೀಡಬೇಕೇ ಎಂಬ ನಿರ್ಧಾರ ರಾಷ್ಟ್ರೀಯ ನಾಯಕರು ಕೈಗೊಳ್ಳಬೇಕಿದೆ. ವಿಜಯೇಂದ್ರ ಖಾಸಗಿ ಕೆಲಸಕ್ಕಾಗಿ ದಿಲ್ಲಿಗೆ ಹೋಗಿದ್ದರು ಎನ್ನಲಾಗಿದೆ.

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಚರ್ಚೆ?

ವಿಜಯೇಂದ್ರ ಅವರ ಸ್ಥಾನಕ್ಕೆ ಪರ್ಯಾಯವಾಗಿ ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರ ಹೆಸರುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಪಕ್ಷದೊಳಗಿನ ಜಾತಿ ಸಮೀಕರಣ, ಹಿರಿಯ ನಾಯಕರ ಪ್ರಭಾವ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಆದರೆ, ವಿಜಯೇಂದ್ರ ಅವರ ದೆಹಲಿ ಭೇಟಿಯ ಉದ್ದೇಶ ಮತ್ತು ಹೈಕಮಾಂಡ್ ನಾಯಕರೊಂದಿಗಿನ ಸಭೆಯ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ ಈ ಭೇಟಿ ರಾಜ್ಯ ಬಿಜೆಪಿಯ ಮುಂದಿನ ನಾಯಕತ್ವದ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿ ಗಮನ ಸೆಳೆದಿದೆ.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮತ್ತು ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.

Related Articles

Back to top button
error: Content is protected !!