ಹೆಚ್ಚುವರಿ ಉಪಮುಖ್ಯಮಂತ್ರಿಗಳನ್ನು ಮಾಡುವ ಅವಶ್ಯಕತೆ ಇಲ್ಲ: ಸಚಿವ ಶಿವಾನಂದ ಪಾಟೀಲ

Views: 0
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಮರ್ಥರಿದ್ದಾರೆ. ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ಅವಶ್ಯಕತೆ ಇಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರು ಹೇಳಿದ್ದು, ಅವರ ವೈಯಕ್ತಿಕ ಅನಿಸಿಕೆ. ಹೆಚ್ಚುವರಿ ಉಪಮುಖ್ಯಮಂತ್ರಿಗಳನ್ನು ಮಾಡುವ ಅವಶ್ಯಕತೆ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಹಾಗೇನಾದರೂ ಮಾಡುವುದಾದರೆ ಹೈ ಕಮಾಂಡ ನಿರ್ಧಾರ ಮಾಡುತ್ತದೆ ಎಂದರು.
ಕಾವೇರಿ ನೀರು ವಿಚಾರದಲ್ಲಿ ಸರ್ಕಾರ ಸರಿಯಾದ ಕ್ರಮಗಳನ್ನೇ ತೆಗೆದುಕೊಂಡಿದೆ. ಈಗಾಗಲೇ ಕೋರ್ಟ್ನಲ್ಲಿ ಸಾಕಷ್ಟು ವ್ಯಾಜ್ಯಗಳು ಬಾಕಿ ಇವೆ. ನಾವು ಆಂಧ್ರ, ತಮಿಳುನಾಡು, ತೆಲಂಗಾಣ, ಗೋವಾ, ಮಹಾರಾಷ್ಟ್ರ ಸೇರಿದಂತೆ ಎಲ್ಲ ರಾಜ್ಯಗಳೊಂದಿಗೂ ವ್ಯಾಜ್ಯ ಹೊಂದಿದ್ದೆವೆ. ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿದ್ದಲ್ಲಿ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ನಾನು ಮಧ್ಯಸ್ಥಿಕೆ ವಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು.






