KPSC ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ವಂಚನೆ : 5 ಕಾಲೇಜಿನಲ್ಲಿ ಪರೀಕ್ಷೆ ಬರೆದ ಹಲವು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

Views: 0
ಯಾದಗಿರಿ: ಜಿಲ್ಲೆಯಲ್ಲಿ ನಡೆದ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ 5 ಕಾಲೇಜಿನಲ್ಲಿ ಪರೀಕ್ಷೆ ಬರೆದ ಕೆಲ ಅಭ್ಯರ್ಥಿಗಳ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಯಾದಗಿರಿಯ ನ್ಯೂ ಕನ್ನಡ ಪಿಯು ಕಾಲೇಜು, ಸಬಾ ಪಿಯು ಕಾಲೇಜ್, ಸರಕಾರಿ ಬಾಲಕಿಯ ಪಿಯು ಕಾಲೇಜು, ಎಲ್ ಕೆಇಟಿ ಬಾಲಕಿಯರ ಪಿಯು ಕಾಲೇಜು ಹಾಗೂ ಮಹಾತ್ಮ ಗಾಂಧಿ ಪಿಯು ಕಾಲೇಜುಗಳಲ್ಲಿ ಪರೀಕ್ಷಾ ಅಕ್ರಮ ನಡೆದಿದೆ ಎನ್ನಲಾಗಿದ್ದು, ಈ ಐದು ಕಾಲೇಜಿನಲ್ಲಿ ಪರೀಕ್ಷೆಯನ್ನು ಬರೆದ ಕೆಲ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಜ್ಯಾದ್ಯಂತ ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆ ನಡೆಯಿತು. ಈ ವೇಳೆ ಹಲವರು ಬ್ಲೂಟೂತ್ ಸಾಧನವನ್ನು ಬಳಸಿಕೊಂಡು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 109, 114, 120(ಬಿ) ಹಾಗೂ 420 ಅಡಿಯಲ್ಲಿ ಕಲಬುರಗಿ ಹಾಗೂ ವಿಜಯಪುರ ಜಿಲ್ಲೆ ಸೇರಿದಂತೆ 9 ಆರೋಪಿಗಳ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸದ್ಯ 9 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಮಾರ್ಗದರ್ಶನದಲ್ಲಿ ನಾಲ್ಕು ವಿಶೇಷ ತಂಡಗಳಲ್ಲಿ ಪೊಲೀಸ್ ಅಧಿಕಾರಿಗಳಿಂದ ತನಿಖೆ ಆರಂಭವಾಗಿದೆ.
ರಾಜ್ಯಾದ್ಯಂತ ನಡೆದ ಕೆಪಿಎಸ್ಸಿಯ ವಿವಿಧ ಇಲಾಖೆಗಳ ಪರೀಕ್ಷೆಯಲ್ಲೂ ಇದೇ ಅಕ್ರಮ ಮರುಕಳಿಸಿದೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸೀನಿಯರ್ ಅಸಿಸ್ಟೆಂಟ್ ಹುದ್ದೆ, ಫುಡ್ ಕ್ಯಾಟಗೇರಿಜೇಷನ್ ಸಿಸ್ಟಮ್ನ ಸೀನಿಯರ್ ಅಸಿಸ್ಟೆಂಟ್ ಸೇರಿ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಹುದ್ದೆ ಭರ್ತಿಗಾಗಿ ಪರೀಕ್ಷೆ ನಡೆಯುತ್ತಿದ್ದು ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆ ಬರೆದಿದ್ದಾರೆ.






